ಬೆಂಗಳೂರು, ಮೇ 16: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರತಿ ಬಾರಿಯೂ ಕರ್ನಾಟಕದಲ್ಲಿ ಮೋದಿ ಅಲೆ ವರ್ಕೌಟ್ ಆಗುತ್ತೆ ಎನ್ನುವ ನಿರೀಕ್ಷೆ ಇತ್ತು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ.
ಹೌದು, ಆಡಳಿತರೂಢ ಕಾಂಗ್ರೆಸ್ ಗೆ ಈ ಬಾರಿಯ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿತ್ತು.
ಇತ್ತ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿತ್ತು. ಆದರೆ, ಈ ಬಾರಿ 28 ಕ್ಷೇತ್ರಗಳನ್ನ ಗೆಲ್ಲುವ ವಿಶ್ವಾಸದಲ್ಲಿದ್ದ ಕಮಲ-ದಳ ನಾಯಕರಿಗೆ ಬಿಗ್ ಶಾಕ್ ಎದುರಾಗಿದ್ದು, ಕಾಂಗ್ರೆಸ್ ನಾಯಕರು ಕನಿಷ್ಠ 20 ಕ್ಷೇತ್ರಗಳನ್ನ ಗೆಲುವ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಬಹುತೇಕ ಕ್ಷೇತ್ರಗಳ ಫಲಿತಾಂಶ ಕಾಂಗ್ರೆಸ್ ಪಕ್ಷದ ಪರವಾಗಿ ಬಂದಿರುವುದರಿಂದ ಕೈ ಪಡೆ ಫುಲ್ ಖುಷ್ ಆಗಿದೆ.
ಕಾಂಗ್ರೆಸ್ ಪಕ್ಷವು ಸುಮಾರು 18-20 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದಿದೆ. ಆದರೆ ಕೆಲವು ಪ್ರಜ್ಞಾವಂತ ನಾಯಕರು ಸುಮಾರು 13-14 ಕ್ಷೇತ್ರಗಳಲ್ಲಿ ಪಕ್ಷಕ್ಕೆ ಉತ್ತಮ ಫಲಿತಾಂಶ ಬರಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆಂದು ಕಾಂಗ್ರೆಸ್ ಹಿರಿಯ ನಾಯಕ ಸಲೀಂ ಅಹ್ಮದ್ ತಿಳಿಸಿದ್ದಾರೆ.
ದಾವಣಗೆರೆ ಕ್ಷೇತ್ರದ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವು ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಸ್ಥಳೀಯ ಮುಖಂಡರು ಹೇಳಿದ್ದಾರೆ. ಬಿಜೆಪಿಯ ಗಾಯತ್ರಿ ಸಿದ್ದೇಶ್ವರ ವಿರುದ್ಧ ಕಣಕ್ಕಿಳಿದಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಜೆಪಿಯ ಶ್ರೀರಾಮುಲು ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಇ ತುಕಾರಾಂ ಅವರಿಗೆ ಎಲ್ಲಾ ಬೂತ್‌ಗಳಿಂದ ಪ್ರತಿಕ್ರಿಯೆ ಉತ್ತಮವಾಗಿದೆ ಎಂದು ಬಳ್ಳಾರಿ ಕಾರ್ಯಕರ್ತರು ಮತ್ತು ಮುಖಂಡರು ಹೇಳಿದ್ದಾರೆ.
ಇನ್ನೂ ಬೆಳಗಾವಿಯಲ್ಲಿ ಮೃಣಾಲ್ ಹೆಬ್ಬಾಳ್ಕರ್ ಮತ್ತು ಚಿಕ್ಕೋಡಿ ಕ್ಷೇತ್ರದದಿಂದ ಪ್ರಿಯಾಂಕಾ ಜಾರಕಿಹೊಳಿ ಅವರತ್ತ ಜನರ ಚಿತ್ತ ಹರಿದಿದೆ ಎಂದು ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ತಿಳಿಸಿದ್ದಾರೆ. ಈ ಹಿಂದಿನ ಮೂರು ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಸೋತಿದ್ದರೂ ಸಹ, ಬಿಜೆಪಿಯ ಮಾಜಿ ಸಂಸದ ಅಣ್ಣಾಸಾಹೇಬ್ ಶಂಕರ ಜೊಲ್ಲೆ ವಿರುದ್ಧ ಪ್ರಿಯಾಂಕಾ, ಬಿಜೆಪಿಯ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಮೃಣಾಲ್ ಸ್ಪರ್ಧಿಸಿದ್ದು, ಕಾಂಗ್ರೆಸ್ ನಾಯಕರು ಗೆಲುವಿನ ವಿಶ್ವಾಸದಲ್ಲಿದ್ದಾರೆ.
ಈ ಬಾರಿ ಬೆಂಗಳೂರು ಸೆಂಟ್ರಲ್ ಮತ್ತು ಗ್ರಾಮಾಂತರದಲ್ಲಿ ಕಾಂಗ್ರೆಸ್‌ಗೆ ಉತ್ತಮ ಸ್ಪಂದನೆ ಸಿಗುತ್ತಿದ್ದು, ಬಿಜೆಪಿಯ ಪಿಸಿ ಮೋಹನ್ ಮತ್ತು ಡಾ ಸಿಎನ್ ಮಂಜುನಾಥ್ ವಿರುದ್ಧ ಕಾಂಗ್ರೆಸ್‌ನ ಮನ್ಸೂರ್ ಅಲಿಖಾನ್ ಮತ್ತು ಡಿಕೆ ಸುರೇಶ್ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.
ತುಮಕೂರಿನಲ್ಲಿ ಕಾಂಗ್ರೆಸ್ ಪಕ್ಷವು ಗೆಲುವಿನ ವಿಶ್ವಾಸದಲ್ಲಿದೆ. ಬಿಜೆಪಿ ಅಭ್ಯರ್ಥಿ ಮುಖಂಡ ವಿ ಸೋಮಣ್ಣ ವಿರುದ್ಧ ಪಕ್ಷದ ಮುದ್ದ ಹನುಮೇಗೌಡ ಕಣಕ್ಕಿಳಿದಿದ್ದಾರೆ. ಲಿಂಗಾಯತರು ಸೋಮಣ್ಣರನ್ನು ಅಗಾಧವಾಗಿ ಬೆಂಬಲಿಸಿದರೆ, ಎಸ್‌ಸಿ ಹಾಗೂ ಎಸ್‌ಟಿಗಳನ್ನು ಹೊರತುಪಡಿಸಿ, ಕುರುಬರು ಮತ್ತು ಅಲ್ಪಸಂಖ್ಯಾತರು ಒಕ್ಕಲಿಗರಾದ ಮುದ್ದಹನುಮೇಗೌಡರನ್ನು ಬೆಂಬಲಿಸಿದ್ದಾರೆ ಎನ್ನುವ ವಿಶ್ವಾಸದಲ್ಲಿ ಕಾಂಗ್ರೆಸ್ ಇದೆ. ಇತ್ತ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಮಾಜಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಯುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎಂ.ಆರ್.ಸೀತಾರಾಮ್ ಅವರ ಪುತ್ರ ರಕ್ಷಾ ರಾಮಯ್ಯ ಕಣಕ್ಕಿಳಿದಿದ್ದಾರೆ, ಇಲ್ಲಿಯೂ ಕೂಡ ಕಾಂಗ್ರೆಸ್ ಪಕ್ಷ ಉತ್ತಮ ಫಲಿತಾಂಶ ಪಡೆಯಲಿದೆ ಎಂದು ಹೇಳಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಕೈ ಹಿಡಿದ ಗ್ಯಾರಂಟಿ?
ಕಳೆದ ವಿಧಾನಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನ ನೀಡಿತ್ತು. ಈ ಗ್ಯಾರಂಟಿಗಳಿಗೆ ರಾಜ್ಯದ ಕಾಂಗ್ರೆಸ್ ಬಹುಮತವನ್ನ ತಂದು ಕೊಟ್ಟಿದೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷ ತಾನು ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್‌ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ತಿಂಗಳಿಗೆ 3 ಸಾವಿರ ರೂ. ಮನೆಯ ಗೃಹಿಣಿಯರಿಗೆ ತಿಂಗಳಿಗೆ 2 ಸಾವಿರ ರೂ. ಸಹಾಯ ಧನ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಬಿಪಿಎಲ್ ಕಾರ್ಡ್‌ದಾರರಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ ನೀಡೋದಾಗಿ ಕಾಂಗ್ರೆಸ್ ಹೇಳಿತ್ತು ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದ ಬಳಿಕ ಹಂತ ಹಂತವಾಗಿ ಕಾಂಗ್ರೆಸ್ ಈ ಗ್ಯಾರಂಟಿಗಳನ್ನ ಜಾರಿಗೊಳಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಹೆಚ್ಚಾಗಲೂ ಈ ಗ್ಯಾರಂಟಿಗಳಿಂದ ಎಂಬ ಮಾತು ಕೇಳಿ ಬಂದಿದೆ.
ಇನ್ನೂ ಕಾಂಗ್ರೆಸ್ ಈ ಪಂಚ ಗ್ಯಾರಂಟಿಯ ಅಸ್ತ್ರಗಳನ್ನೇ ಲೋಕಸಭಾ ಚುನಾವಣೆಯಲ್ಲಿ ಬಳಸಿಕೊಂಡಿವೆ. ಮಳೆ, ಬೆಳೆ ಇಲ್ಲದೇ ಗ್ರಾಮೀಣ ಪ್ರದೇಶದಲ್ಲಿ ಜನ ರೋಸಿ ಹೋಗಿದ್ರು, ಅದೆಷ್ಟೋ ಬಡ ಕುಟುಂಬಗಳಿಗೆ ಹಾಗೂ ಬಡ ಮಹಿಳೆಯರಿಗೆ ತಿಂಗಳಿಗೆ ಸರ್ಕಾರ ಕೊಡುವ 2000 ರೂಪಾಯಿ ಆಸರೆಯಾಗಿದೆ. ಇತ್ತ ಪಂಚ ಗ್ಯಾರಂಟಿಗಳಿಂದ ರಾಜ್ಯದ ಮಹಿಳೆಯರಿಂದಲೂ ಸಿದ್ದರಾಮಯ್ಯ ಬೆಂಬಲ ಸಿಕ್ಕಿದೆ ಎಂಬ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬಂದಿದೆ. ಈಗಾಗಲೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ.