ಸವದತ್ತಿಯ 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಗೆ ಶಂಕುಸ್ಥಾಪನೆ

ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆಯ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ₹30 ಕೋಟಿ ವೆಚ್ಚದಲ್ಲಿ ಆಸ್ಪತ್ರೆಯ ವಿಸ್ತರಣೆ ಹಾಗೂ ನವೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಯೋಜನೆಯ ಮೂಲಕ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗಿದ್ದು, ರೋಗಿಗಳಿಗೆ ಇನ್ನಷ್ಟು ಸಮರ್ಪಕ, ವೇಗವಾದ ಮತ್ತು ಗುಣಮಟ್ಟದ ಚಿಕಿತ್ಸೆಯನ್ನು ನೀಡಲು ಅನುಕೂಲವಾಗಲಿದೆ ಎಂದು ಹೇಳಿದರು.

ವಿಶೇಷವಾಗಿ ಗ್ರಾಮೀಣ ಭಾಗದ ಜನತೆಗೆ ಸಮೀಪದಲ್ಲೇ ಉತ್ತಮ ಆರೋಗ್ಯ ಸೇವೆಗಳು ದೊರಕಲಿದ್ದು, ತುರ್ತು ಚಿಕಿತ್ಸಾ ಸೇವೆಗಳು ಹಾಗೂ ವಿಶೇಷ ವಿಭಾಗಗಳು ಇನ್ನಷ್ಟು ಬಲಪಡಿಸಲ್ಪಡಲಿವೆ. ಆಸ್ಪತ್ರೆಯ ಮೂಲಸೌಕರ್ಯ ಅಭಿವೃದ್ಧಿಯಿಂದ ಸ್ಥಳೀಯ ಆರೋಗ್ಯ ವ್ಯವಸ್ಥೆಗೆ ಹೊಸ ಚೈತನ್ಯ ಸಿಗಲಿದ್ದು, ಸಾರ್ವಜನಿಕ ಆರೋಗ್ಯ ಸೇವೆಯ ಮಟ್ಟವು ಮತ್ತಷ್ಟು ಉತ್ತೇಜನ ಪಡೆಯಲಿದೆ ಎಂದು ಅವರು ಹೇಳಿದರು.

ರಾಜ್ಯದಾದ್ಯಂತ ಗುಣಮಟ್ಟದ ಹಾಗೂ ಸುಲಭವಾಗಿ ಲಭ್ಯವಾಗುವ ಆರೋಗ್ಯ ಸೇವೆಗಳನ್ನು ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಗ್ರ ಕರ್ನಾಟಕದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸವದತ್ತಿ–ಯಲ್ಲಮ್ಮ ಕ್ಷೇತ್ರದ ಶಾಸಕರಾದ ವಿಶ್ವಾಸ್ . ವೈದ್ಯ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

@ಚಾಲುಕ್ಯ ಕ್ರಾಂತಿ – ಚಿನ್ನಪ್ಪ ಕುಂದರಗಿ

Leave a Reply

Your email address will not be published. Required fields are marked *